ಅವಧಿಯೊಳಗೆ ಕಾಮಗಾರಿ ಮುಕ್ತಾಯಗೊಳಿಸದ ಗುತ್ತಿಗೆದಾರರನ್ನು ಬ್ಲಾಕ್ ಲಿಸ್ಟ್ಗೆ ಸೇರಿಸಿ: ಸಚಿವ ಮಂಕಾಳ ವೈದ್ಯ
ಜನರ ವಿಶ್ವಾಸವನ್ನು ನಾನು ಉಳಿಸಿಕೊಳ್ಳಬೇಕು ಜನ ಸೇವೆಯೆ ನನ್ನ ದ್ಯೇಯ ಸಚಿವ ಮಂಕಾಳು ವೈದ್ಯ
ಕಾರವಾರ: ಸರಕಾರಿ ಅಧಿಕಾರಿಗಳೇ ನೀವು ಬಡವರ ಸಾರ್ವಜನಿಕರ ಸೇವೆ ಮಾಡುವುದಾದರೆ ಮಾತ್ರ ಜಿಲ್ಲೆಯಲ್ಲಿರಿ ಸಾರ್ವಜನಿಕರಿಗೆ ತೊಂದರೆ ನೀಡುವುದಾದರೆ ಜಿಲ್ಲೆಯನ್ನು ಬಿಟ್ಟು ತೊಲಗಿ ಎಂದು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್ ವೈದ್ಯರು ಕಡಕ್ಕಾಗಿ ಎಚ್ಚರಿಕೆ ನೀಡಿದರು.
ಅವರು ಬುಧವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲಾ ತ್ರೈಮಾಸಿಕ ಕೆ.ಡಿ.ಪಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲೆಯಲ್ಲಿ ವಿವಿಧ ಅಭಿವೃದ್ದಿ ಕಾಮಗಾರಿಗಳ ಗುತ್ತಿಗೆವಹಿಸಿ ಕೊಂಡಿರುವ ಗುತ್ತಿಗೆದಾರರು ಮತ್ತು ಗುತ್ತಿಗೆ ಕಂಪನಿಗಳು ನಿಗಧಿ ಅವಧಿಯೊಳಗೆ ಕಾಮಗಾರಿಗಳನ್ನು ಮುಕ್ತಾಯಗೊಳಿಸದೇ ಇದ್ದಲ್ಲಿನ ಅಂತಹವರನ್ನು ಕಪ್ಪುಪಟ್ಟಿಗೆ ಸೇರ್ಪಡೆ ಮಾಡುವಂತೆ ಎಲ್ಲಾ ಅಧಿಕಾರಿಗಳಿಗೆ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್ ವೈದ್ಯ ಸೂಚನೆ ನೀಡಿದರು.
ಕಾರವಾರ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ 450 ಹಾಸಿಗೆಯ ಸೂಪರ್ ಸ್ಪೆಷಾಲಟಿ ಆಸ್ಪತ್ರೆಯ ಕಟ್ಟಡ ಕಾಮಗಾರಿಯು ನಿಗಧಿತ ಒಪ್ಪಂದದAತೆ ಮುಕ್ತಾಯಗೊಂಡು ಮಾರ್ಚ್ ತಿಂಗಳಲ್ಲಿ ಕಟ್ಟಡ ಹಸ್ತಾಂತರವಾಗಬೇಕಿತ್ತು. ಆದರೆ ಇಲ್ಲಿಯವರೆಗೆ ಹಸ್ತಾಂತರವಾಗದ ಹಿನ್ನಲೆಯಲ್ಲಿ ರೋಗಿಗಳಿಗೆ ಹಾಗೂ ಸಾರ್ವಜನಿಕರಿಗೆ ಯೋಜನೆಯ ಪ್ರಯೋಜನ ದೊರೆಯದೇ ಚಿಕಿತ್ಸೆಗೆ ಪರದಾಡುವಂತಾಗಿದೆ. ಅಲ್ಲದೇ ಜಿಲ್ಲೆಯಲ್ಲಿ ಕೈಗೊಂಡಿರುವ ಹಲವು ಅಭಿವೃದ್ದಿ ಕಾಮಗಾರಿಗಳ ಗುತ್ತಿಗೆ ವಹಿಸಿಕೊಂಡಿರುವ ಇತರೆ ಗುತ್ತಿಗೆದಾರರು ಮತ್ತು ಗುತ್ತಿಗೆ ಕಂಪನಿಗಳು ನಿಗಧಿತ ಅವಧಿಯೊಳಗೆ ಕಾಮಗಾರಿಗಳನ್ನು ಮುಕ್ತಾಯಗೊಳಿದೇ ಇದ್ದಲ್ಲಿ ಅವರನ್ನು ಕಪ್ಪು ಪಟ್ಟಿಗೆ ಸೇರಿಸುವಂತೆ ಮತ್ತು ಯಾವುದೇ ಕಾರಣಕ್ಕೂ ಟೆಂಡರ್ ಅವಧಿಯನ್ನು ವಿಸ್ತರಣೆ, ನವೀಕರಣ ಸೇರಿದಂತೆ ಬಿಲ್ಲು ಪಾವತಿಯನ್ನೂ ಸಹ ಮಾಡದಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಜಿಲ್ಲೆಯಲ್ಲಿ ಆಸ್ಪತ್ರೆಗಳಿಗೆ ಬರುವ ರೋಗಿಗಳನ್ನು ವೈದ್ಯರು ಮತ್ತು ಸಿಬ್ಬಂದಿಗಳು ಗೌರವದಿಂದ ಕಾಣುವುದರ ಜೊತೆಗೆ ಸೌಜನ್ಯದಿಂದ ನಡೆದುಕೊಳ್ಳಬೇಕು ಹಾಗೂ ಆಸ್ಪತ್ರೆಗೆ ಬರುವವರು ಬಡಜನತೆಯಾಗಿದ್ದು, ಅವರಿಗೆ ಚೀಟಿ ನೀಡಿ ಹೊರಗಡೆಯಿಂದ ಔಷಧ ಪಡೆಯಲು ತಿಳಿಸುವ ವೈದ್ಯರ ವಿರುದ್ದ ಕ್ರಮ ಕೈಗೊಳ್ಳಲಾಗುವುದು ಹಾಗೂ ಆಸ್ಪತ್ರೆಯಲ್ಲಿ ಔಷಧಿ ಲಭ್ಯವಿಲ್ಲದಿದ್ದಲ್ಲಿ ಆರೋಗ್ಯ ರಕ್ಷಾ ಸಮತಿಯ ಮೂಲಕ ಖರೀದಿಸಿ, ರೋಗಿಗಳಿಗೆ ಆಸ್ಪತ್ರೆಯಲ್ಲಿಯೇ ಔಷಧಗಳನ್ನು ಉಚಿತವಾಗಿ ನೀಡಬೇಕು ಎಂದು ಸೂಚಿಸಿದ ಸಚಿವರು, ಜಿಲ್ಲಾಆಸ್ಪತ್ರೆಗೆ ಬೇಕಾದ ಎಮ್.ಆರ್.ಐ ಯಂತ್ರವನ್ನು ಒದಗಿಸಲು ಅಗತ್ಯ ಕ್ರಮಕೈಗೊಳ್ಳಲಾಗುದು ಎಂದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಈಶ್ವರ ಕುಮಾರ ಕಾಂದೂ, ಅಪರ ಜಿಲ್ಲಾಧಿಕಾರಿ ಪ್ರಕಾಶ್ ರಜಪೂತ್, ಕೆಡಿಪಿ ಅನುಷ್ಠಾನ ಸಮಿತಿಯ ಸದಸ್ಯರುಗಳು ಹಾಗೂ ವಿವಿಧ ಇಲಾಖೆಗಳ ಅನುಷ್ಠಾನಾಧಿಕಾರಿಗಳು ಉಪಸ್ಥಿತರಿದ್ದರು.