ಪೆಟ್ರೋಲ್ ಡೀಸೆಲ್ ಬೆಲೆ ಎರಿಕೆ ವಿರುದ್ದ ಬಿಜೆಪಿ ಪಕ್ಷದ ವತಿಯಿಂದ , ಮನವಿ ಪ್ರತಿಭಟನೆ

ಭಟ್ಕಳ: ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರ ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ ಮಾಡಿರುವುದನ್ನು ಹಿಂಪಡೆಯುವಂತೆ ಭಟ್ಕಳ ಬಿಜೆಪಿ ಮಂಡಲವತಿಯಿಂದ ವಿಶೇಷವಾಗಿ ಕಾರಿಗೆ ಹಗ್ಗ ಕಟ್ಟಿ ಎಳೆದು ಪ್ರತಿಭಟನಾ ಮೆರವಣಿಗೆ ನಡೆಸಿ ಸಹಾಯಕ ಆಯುಕ್ತ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರಕಾರ ಪೆಟ್ರೋಲ್, ಡಿಸೇಲ್ ಬೆಲೆಯನ್ನು ದಿಢೀರ್ ಏರಿಕೆ ಮಾಡಿ ಜನಸಾಮಾನ್ಯರ ಮೇಲೆ ಹೊರೆ ಉಂಟು ಮಾಡಿದೆ. ಬೇರೆ ಯಾವುದೇ ರಾಜ್ಯದಲ್ಲಿ ಪೆಟ್ರೋಲ್, ಡಿಸೇಲ್ ಬೆಲೆ ಜಾಸ್ತಿ ಮಾಡದಿದ್ದರೂ ಸಹ ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಗ್ಯಾರಂಟಿ ಯೋಜನೆಗೆ ಹಣ ಹೊಂದಿಸುವ ಏಕೈಕ ಉದ್ದೇಶದಿಂದ ಪೆಟ್ರೋಲ್, ಡಿಸೇಲ್ ಬೆಲೆ ಜಾಸ್ತಿ ಮಾಡಿದೆ. ಇದಕ್ಕೆ ಪುಷ್ಟಿ ಎಂಬಂತೆ ರಾಜ್ಯದ ಕೆಲ ಸಚಿವರು ಗ್ಯಾರಂಟಿ ಯೋಜನೆಯ ಹಣ ಹೊಂದಿಸುವ ಸಲುವಾಗಿಯೇ ಪೆಟ್ರೋಲ್, ಡಿಸೇಲ್ ಬೆಲೆ ಹೆಚ್ಚು ಮಾಡಲಾಗಿದೆ ಎಂದು ಬೆಲೆ ಏರಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ತೈಲ ಬೆಲೆ ಏರಿಕೆಯಿಂದ ದ್ವಿಚಕ್ರ ವಾಹನ,ಆಟೋ, ಟ್ಯಾಕ್ಸಿ, ಗೂಡ್ಡ ರಿಕ್ಷಾ ಸೇರಿದಂತೆ ವಿವಿಧ ವಾಹನ ಇದ್ದವರಿಗೆ ಹೊರೆಯಾಗಲಿದೆ. ತೈಲ ಬೆಲೆ ಏರಿಕೆಯಿಂದ ಎಲ್ಲಾ ಸಾಮಗ್ರಿಗಳ ಬೆಲೆ ಏರಿಕೆ ಆಗಲಿದ್ದು, ಜನರು ತೊಂದರೆ ಅನುಭವಿಸಲಿದ್ದಾರೆ. ಲೋಕಸಭೆ ಚುನಾವಣೆ ವರೆಗೂ ತೈಲ ಬೆಲೆ ಏರಿಕೆ ಮಾಡದ ಸರಕಾರ ಚುನಾವಣೆ ಮುಗಿದು ಫಲಿತಾಂಶ ಪ್ರಕಟ ಆದ ಬಳಿಕ ದಿಢೀರ್ ಎಂದು ತೈಲ ಬೆಲೆ ಏರಿಕೆ ಮಾಡಿ ಜನ ಸಾಮಾನ್ಯರಿಗೆ ತೊಂದರೆ ಉಂಟಾಗುವಂತೆ ಮಾಡಿದೆ. ರಾಜ್ಯದ ಜನತೆಯ ಹಿತದೃಷ್ಟಿಯಿಂದ ತೈಲ ಬೆಲೆ ಹೆಚ್ಚಿಸಿರುವುದನ್ನು ಕೂಡಲೇ ಹಿಂಪಡೆಯುವಂತೆ ರಾಜ್ಯ ಸರಕಾರಕ್ಕೆ ತಾವು ಸೂಚನೆ ನೀಡಬೇಕು. ಅದರಂತೆ ಕಾಂಗ್ರೆಸ್ ಸರಕಾರ ರಾಜ್ಯದಲ್ಲಿ ಆಡಳಿತಕ್ಕೆ ಬಂದ ಮೇಲೆ ಬೆಲೆ ಏರಿಕೆ ಮಾಡಿ ಜನ ಸಾಮಾನ್ಯರಿಗೆ ಹೊರೆ ಮಾಡಿದೆ. ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯ ನಡೆಯುತ್ತಿಲ್ಲ, ಗ್ಯಾರಂಟಿ ಯೋಜನೆಯನ್ನೇ ಕಾಂಗ್ರೆಸ್ ನೇತೃತ್ವದ ಸರಕಾರ ಅಭಿವೃದ್ಧಿ ಎಂದು ಬಿಂಬಿಸುತ್ತಿದೆ. ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊಲೆ, ಸುಲಿಗೆ ಹೆಚ್ಚಿದ್ದು, ಕಾನೂನು ಸುವ್ಯವಸ್ತೆ ಸಂಪೂರ್ಣ ಹದಗೆಟ್ಟಿದೆ. ಎಲ್ಲಾ ಕಡೆ ಅಕ್ರಮ ಚಟುವಟಿಕೆ ಹೆಚ್ಚಿದ್ದು ಇದಕ್ಕೆ ಸೂಕ್ತ ಕಡಿವಾಣ ಹಾಕುವ ಕೆಲಸ ಮಾಡಬೇಕು ಎಂದು ಮನವಿಯಲ್ಲಿ ಉಲ್ಲೇಖಿಸಿದ್ದಾರೆ.

ಪ್ರತಿಭಟನಾ ಮೆರವಣಿಗೆ ವೇಳೆ ಶಂಸುದ್ದಿನ್ ಸರ್ಕಲ್ ಸಮೀಪ ರಸ್ತೆ ತಡೆದು ಕೆಲಕಾಲ ಧರಣಿ ನಡೆಸಿದರು. ಈ ವೇಳೆ ಸ್ಥಳಕ್ಕೆ ಸಹಾಯಕ ಆಯುಕ್ತೆ ಡಾ.ನಯನ ಮನವಿ ಸ್ವೀಕರಿಸಿದರು. ಈ ವೇಳೆ ತಹಶೀಲ್ದಾರ್ ನಾಗರಾಜ ನಾಯ್ಕಡ ಉಪಸ್ಥಿತರಿದ್ದರು

WhatsApp
Facebook
Telegram
error: Content is protected !!
Scroll to Top