ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತ ಇಫೆಕ್ಟ್‌ನಿಂದ ವ್ಯಾಪಕವಾಗಿ ಮಳೆಯಾಗುತ್ತಿದ್ದು, ಆರೆಂಜ್ ಅಲರ್ಟ್ ಘೋಷಣೆಯಾಗಿದೆ. ಈ ಹಿನ್ನೆಲೆಯಲ್ಲಿ ಡಿ.3ರಂದು ದಕ್ಷಿಣ ಕನ್ನಡ ಜಿಲ್ಲೆಯ ಶಾಲೆ, ಪಿಯುಸಿಗಳಿಗೆ ರಜೆ ಘೋಷಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ನಾಳೆ ರಜೆಯನ್ನು ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶಿಸಿದ್ದಾರೆ.
ಅದೇ ರೀತಿ ದುರ್ಬಲ / ಶಿಥಿಲ ಕಟ್ಟಡಗಳು ಇದ್ದಲ್ಲಿ ಅಂತಹ ಕಟ್ಟಡಗಳನ್ನು ಪಾಠ, ಪ್ರವಚನಗಳಿಗೆ ಬಳಸುವಂತಿಲ್ಲ. ಈ ನಿಟ್ಟಿನಲ್ಲಿ ಶಾಲಾ ಕಾಲೇಜುಗಳ ಮುಖ್ಯಸ್ಥರು ಕಟ್ಟಡಗಳ ಸುಸ್ಥಿತಿಯ ಬಗ್ಗೆ ಗಮನಹರಿಸಬೇಕಿದೆ. ಜಿಲ್ಲೆಯಲ್ಲಿ ವಿಪರೀತ ಮಳೆ ಸುರಿಯುತ್ತಿರುವುದರಿಂದ ಸಾರ್ವಜನಿಕರು ನದಿಗಳ/ತೋಡುಗಳು ಮತ್ತು ವಿದ್ಯುತ್ ಕಂಬ/ತಂತಿ ಸಮೀಪ ಹೋಗದಂತೆ ಎಚ್ಚರಿಕೆ ವಹಿಸಬೇಕು. ಪ್ರಾಕೃತಿಕ ವಿಕೋಪದಿಂದ ಯಾವುದೇ ರೀತಿಯ ಘಟನೆಗಳು ಸಂಭವಿಸಿದಲ್ಲಿ ಅಥವಾ ಸಂಭವಿಸಬಹುದಾದ ಸೂಚನೆ ಇದ್ದಲ್ಲಿ ಸಾರ್ವಜನಿಕರು ಕೂಡಲೇ ಸಂಬಂಧಪಟ್ಟ ಪಂಚಾಯತ್/ನಗರ ಸ್ಥಳೀಯ ಸಂಸ್ಥೆಗಳಿಗೆ ಮಾಹಿತಿಯನ್ನು ನೀಡುವಂತೆ ಸೂಚಿಸಲಾಗಿದೆ.